ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ಕನ್ನಡ ಬಳಕೆ ಕಡ್ಡಾಯ: ಡಿಸಿ ನಿತೇಶ್ ಪಾಟೀಲ ವಾರ್ನಿಂಗ್…
ಬೆಳಗಾವಿ,- ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಸಮರ್ಪಕವಾಗಿ ಜಾರಿಗೊಳಿಸುವುದರ ಜತೆಗೆ ಜಿಲ್ಲೆಯ ಪ್ರತಿಯೊಂದು ಅಂಗಡಿ-ಮುಂಗಟ್ಟುಗಳ ನಾಮಫಲಕಗಳ ಮೇಲ್ಭಾಗದಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಬಳಕೆಯಾಗಿರುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟುನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಮಾ.11) ನಡೆದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೆಯಕ-2022 ಅನುಷ್ಠಾನ ಕುರಿತು ಹಾಗೂ ನಾಮಫಲಕದಲ್ಲಿ ಕನ್ನಡ ಭಾಷೆಯ ಬಳಕರ ಕುರಿತು ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರ ಜಾರಿಗೆ ತಂದಿರುವ ವಿಧೇಯಕದ ಅನುಸಾರ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಶೇ.60 ಹಾಗೂ ಇತರೆ ಭಾಷೆ ಶೇ.40 ರ ಅನುಪಾತದಲ್ಲಿ ಇರಬೇಕು. ಜಿಲ್ಲೆಯಲ್ಲಿರುವ ಎಲ್ಲ ಕಚೇರಿಗಳು, ಅಂಗಡಿ-ಮುಂಗಟ್ಟುಗಳ ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡ ಭಾಷೆ ಇರಬೇಕು. ಮಾರ್ಚ್ 13 ರ ಒಳಗಾಗಿ ಈ ಆದೇಶವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳು; ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು.
ಕೆಲವು ಕಡೆಗಳಲ್ಲಿ ಕನ್ನಡ ಹಾಗೂ ಇತರೆ ಭಾಷೆಗಳು ಶೇ.50:50 ಅನುಪಾತದಲ್ಲಿರುವುದು ಕಂಡುಬಂದಿರುತ್ತದೆ. ಇಂತಹ ನಾಮಫಲಕಗಳನ್ನು ಕೂಡ ತಕ್ಷಣವೇ ಬದಲಾಯಿಸಿ ನಿಯಮಾನುಸಾರ ಶೇ.60:40 ರ ಪ್ರಮಾಣದಲ್ಲಿರುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಬೆಳಗಾವಿ ಗಡಿ ಜಿಲ್ಲೆಯಾಗಿರುವುದರಿಂದ ಬೆಳಗಾವಿ ನಗರ ಹಾಗೂ ಗಡಿಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ನಿಯಮಾನುಸಾರ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಸಭೆಯನ್ನು ನಿರ್ವಹಿಸಿದರು.
ಉಪ ಪೊಲೀಸ್ ಆಯುಕ್ತರಾದ ಪಿ.ವಿ.ಸ್ನೇಹಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಮಹಾನಗರ ಪಾಲಿಕೆಯ ಆಯುಕ್ತರಾದ ಪಿ.ಎನ್.ಲೋಕೇಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ ಕಲಾದಗಿ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.