ಬಾಂಬ್ ಬ್ಲಾಸ್ಟ್ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ..! ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ
ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಪೊಲೀಸರ ತನಿಖೆ ಚುರುಕಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಖುದ್ದು ಬಾಂಬ್ ಸ್ಫೋಟ ಸಂಭವಿಸಿದ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳಿಂದ ಸ್ಫೋಟದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಅವಳಿ ಸ್ಫೋಟ ಸಂಭವಿಸಿದ ರಾಮೇಶ್ವರಂ ಕೆಫೆಯನ್ನು ಪೊಲೀಸರು ಸುತ್ತುವರಿದಿದ್ದಾರೆ. ಭದ್ರತಾ ಕೋಟೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಜಾಗದಲ್ಲಿ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿರುವ ಸಿಎಂ ಸಿದ್ದರಾಮಯ್ಯ, ಬ್ಯಾಗ್ ಇಟ್ಟು ಹೋದ ಶಂಕಿತನ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಬಗ್ಗೆ ಸೋಷಿಯಲ್ ಮೀಡಿಯಾ Xನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಆದಷ್ಟು ಬೇಗ ಕೃತ್ಯ ಎಸಗಿದ ವ್ಯಕ್ತಿಯನ್ನು ಪತ್ತೆ ಹಚ್ಚಿ, ಬಂಧಿಸಲಾಗುವುದು. ಘಟನೆಯಲ್ಲಿ ಗಾಯಗೊಂಡಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಮೇಶ್ವರಂ ಕೆಫೆಗೆ ಭೇಟಿ ನೀಡುವ ಮುನ್ನ ಸಿಎಂ ಸಿದ್ದರಾಮಯ್ಯ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ವೈದ್ಯರೊಂದಿಗೆ ಮಾತನಾಡಿ ಗಾಯಾಳುಗಳ ಚಿಕಿತ್ಸೆಯ ಮಾಹಿತಿ ಪಡೆದುಕೊಂಡಿದ್ದಾರೆ.