ಇಂದು 5ನೇ ಗ್ಯಾರಂಟಿ ‘ಯುವನಿಧಿ ಯೋಜನೆಗೆ’ ಚಾಲನೆ
ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯ ಯೋಜನೆಯದ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗುತ್ತಿದ್ದು ಜಿಲ್ಲೆಯ ವಿಳಂಬ ಪಾರ್ಕ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ.
ಸ್ವಾಮಿ ವಿವೇಕಾನಂದರ ಜನ್ಮ ದಿನದಂದೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆಯಲಿರುವ ಕಾರ್ಯಕ್ರಮ ಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಗೊಂಡಿದ್ದು, 1.5 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ. ಇದಕ್ಕಾಗಿ, 1 ಲಕ್ಷ ಮಂದಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 12.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
ವಿದ್ಯಾವಂತ ನಿರುದ್ಯೋಗಿ ಫಲಾನುಭವಿ ಗಳಲ್ಲದೆ, ಅಂತಿಮ ವರ್ಷಗಳ ಸೆಮಿಸ್ಟರ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಕಾಲೇಜುಗಳ ವಿದ್ಯಾರ್ಥಿಗಳೂ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭದ ಸ್ಥಳಕ್ಕೆ ಕರೆ ಕರೆ ತರಲು ರಸ್ತೆ ಸಾರಿಗೆ ನಿಗಮ ಮತ್ತು ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್‌ಗೆ ನೋಡಲ್ ಅಧಿಕಾರಿ ಗಳನ್ನು ನೇಮಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಪ್ರತಿವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್‌ಸಂಗ್ರ ಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಯುವನಿಧಿಗೆ ಈ ವರ್ಷ ನೋಂದಣಿಗೆ 5.29 ಲಕ್ಷ ಟಾರ್ಗೆಟ್ ಇದ್ದು, ಈವರೆಗೆ 61 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಯುವನಿಧಿ ಯೋಜನೆಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ನೋಂದಣಿ ಮಾಡುತ್ತಿದ್ದು, ನೋಂದಣಿ ಮಾಡಿದವರಿಗೆ ಹೆಚ್ಚುವರಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ.
ಈ ಒಂದು ಬೃಹತ್ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಡಾ.ಎಂ.ಸಿ.ಸುಧಾಕರ್‌ಸೇರಿ ಹಲವು ಸಚಿವರು, ಗಣ್ಯರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.