ಬೆಳಗಾವಿಯ ಸುವರ್ಣ ಸೌಧದಲ್ಲಿ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

WhatsApp Group Join Now
Telegram Group Join Now

ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು 2023-24 ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.

ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ಒಮ್ಮೆಲೆ ವಿತರಿಸಲು ಕ್ರಮ ಕೈಗೊಳ್ಳುವುದು ಸೂಕ್ತ. ಆದ್ದರಿಂದ ಬೆಳಗಾವಿ ಸೇರಿದಂತೆ ಪ್ರತಿವರ್ಷ ಕನಿಷ್ಠ ಎರಡು ಜಿಲ್ಲೆಗಳ ವಿಕಲಚೇತನರಿಗೆ ಆದ್ಯತೆ ಮೇರೆಗೆ ಒಂದೆರಡು ವರ್ಷಗಳಲ್ಲಿ ವಾಹನ ವಿತರಿಸಲು ಕ್ರಮ ಕೈಗೊಳ್ಳಬೇಕು. ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಒಮ್ಮೆ ಮಂಜೂರಾಗಿರುವ ಪಾಲಿಹೌಸ್ ಗಳನ್ನೇ ಹೊಸದಾಗಿ ಮಂಜೂರಾದ ಫಲಾನುಭವಿಗಳಿಗೆ ಅಕ್ರಮವಾಗಿ ಹಸ್ತಾಂತರಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.

ಈಗಾಗಲೇ ಕಟ್ಟಡ ಪೂರ್ಣಗೊಂಡಿರುವ ತಾಯಿಮಕ್ಕಳ ಆಸ್ಪತ್ರೆಗಳು ಐದಾರು ವರ್ಷವಾದರೂ ಕಾರ್ಯಾರಂಭಿಸದಿರುವುದಿಲ್ಲ. ಮುಂದಿನ ಕೆಡಿಪಿ ಸಭೆಗಿಂತ ಮುಂಚೆ ಇಂತಹ ಆಸ್ಪತ್ರೆಗಳು ಕಾರ್ಯಾರಂಭಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿವರ್ಷ ಕನಿಷ್ಠ ಎರಡು ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಹೊಂದುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು. ಹೀಗೆ ಮಾಡಿದಲ್ಲಿ ನಾಲ್ಕೈದು ವರ್ಷಗಳಲ್ಲಿ ಜಿಲ್ಲೆಯಾದ್ಯಂತ ಎಲ್ಲೆಡೆ ಸ್ವಂತ ಅಂಗನವಾಡಿ ಕಟ್ಟಡಗಳನ್ನು ಹೊಂದಿದಂತಾಗುತ್ತದೆ ಎಂದು ತಿಳಿಸಿದರು.

ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಸ್ವಂತ ಟ್ಯಾಂಕರ್ ಖರೀದಿಸುವಂತೆ ಈಗಾಗಲೇ ಸೂಚನೆ ನೀಡಲಾಗಿತ್ತು. ಇದುವರೆಗೆ 280 ಗ್ರಾಮ ಪಂಚಾಯಿತಿಗಳಲ್ಲಿ ಸ್ವಂತ ಟ್ಯಾಂಕರ್ ಖರೀದಿಸಲಾಗಿದ್ದು, ಉಳಿದ ಪಂಚಾಯಿತಿಗಳಲ್ಲಿ ಆದಷ್ಟು ಬೇಗನೇ ಟ್ಯಾಂಕರ್ ಖರೀದಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ. ಸಚುವರು ಕಟ್ಟುನಿಟ್ಟಿನ ಸೂಚನೆ ನೀಡಿ
ಸ್ವಂತ ಟ್ಯಾಂಕರ್ ಹೊಂದಿದ್ದರೆ ಬೇಸಿಗೆಯಲ್ಲಿ ತುರ್ತಾಗಿ ಕುಡಿಯುವ ನೀರು ಪೂರೈಕೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ವಸತಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ವಸತಿ ಯೋಜನೆಗಳಿಗೆ ಸಲ್ಲಿಸುವ ಎಲ್ಲರಿಗೂ ಸೌಲಭ್ಯ ಕಲ್ಪಿಸಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ಮಕ್ತಾಯಗೊಂಡಿರುವುದರಿಂದ ಆಕ್ಷೇಪಣೆ ಪರಿಶೀಲಿಸಿ ಕೂಡಲೇ ನೇಮಕಾತಿ ಆದೇಶ ಹೊರಡಿಸಬೇಕು ಎಂದು ತಿಳಿಸಿದರು

ಜಿಲ್ಲೆಯಲ್ಲಿ ಅತೀ ಹೆಚ್ಚು ಜನಸಂಖ್ಯೆ ಇರುವುದರಿಂದ ಚಿಕ್ಕೋಡಿ, ಗೋಕಾಕ ಮತ್ತಿತರ ಕಡೆಗಳಲ್ಲಿಯೂ ಕ್ರೀಡಾಶಾಲೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ನಿರ್ದೇಶನ ನೀಡಿದರು

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಇರುವುದರಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು. ಬೆಳಗಾವಿ ವಿಭಾಗಕ್ಕೆ 32 ಹೊಸ ಬಸ್ ಗಳನ್ನು ಈಗಾಗಲೇ ಒದಗಿಸಲಾಗಿದೆ. ಇನ್ನಷ್ಟು ಹೆಚ್ಚುವರಿ ಬಸ್ ಗಳನ್ನು ಪಡೆದುಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು

ಸರಕಾರದ ನಿರ್ದೇಶನದಂತೆ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶಗಳನ್ನು ನಡೆಸಬೇಕು. ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು

ಗೃಹಲಕ್ಷ್ಮೀ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ನೋಂದಾಯಿತ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ತಿಳಿಸಿದರು

ಭೂಸ್ವಾಧೀನ ಹಾಗೂ ಹೆಚ್ಚಿನ ಪರಿಹಾರ ನೀಡುವುದಕ್ಕೆ ಸಂಬಂಧಿಸಿದಂತೆ ರೈತರ ಪ್ರತಿಭಟನೆಯಿಂದಾಗಿ ಬೆಳಗಾವಿ-ಧಾರವಾಡ ರೈಲುಮಾರ್ಗ; ಎಸ್.ಟಿ.ಪಿ. ಸೇರಿದಂತೆ ಅನೇಕ ಪ್ರಮುಖ ಯೋಜನೆಗಳು ವಿಳಂಬಗೊಳ್ಳುತ್ತಿವೆ. ಆದ್ದರಿಂದ ಈ ಯೋಜನೆಗಳ ಸಮರ್ಪಕ‌ ಅನುಷ್ಠಾನಕ್ಕಾಗಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು

ಸಂಸದೆ ಶ್ರೀಮತಿ ಮಂಗಳಾ ಅಂಗಡಿ, ರಾಜ್ಯಸಭೆ ಸದಸ್ಯ ಈರಣ್ಣಾ ಕಡಾಡಿ, ರಾಯಬಾಗ ಶಾಸಕರಾದ ದುರ್ಯೋಧನ ಐಹೊಳೆ, ಬೆಳಗಾವಿ(ಉತ್ತರ) ಶಾಸಕ ಆಸಿಫ್(ರಾಜು) ಸೇಠ್, ಖಾನಾಪುರ ಶಾಸಕ ವಿಠ್ಠಲ ಹಲಗೇಕರ್, ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸೇರಿ ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಅನುಕಂಪ ಆಧಾರಿತವಾಗಿ ನೇಮಕಗೊಂಡ ನೌಕರರಿಗೆ ನೇಮಕಾತಿ ಆದೇಶಪತ್ರವನ್ನು ವಿತರಿಸಿದರು.

WhatsApp Group Join Now
Telegram Group Join Now
Back to top button